ಕರ್ನಾಟಕ ರಾಜ್ಯ “ಸರ್ಕಾರಿ ಶಿಕ್ಷಕರಿಗೆ” ಪ್ರತಿ ತಿಂಗಳ 10ರೊಳಗೆ ವೇತನಕ್ಕೆ ಆದೇಶ

0
924

ರಾಜ್ಯದ ಎಲ್ಲಾ ಶಿಕ್ಷಕರಿಗೂ ಪ್ರತಿ ತಿಂಗಳು 1ರಿಂದ 10ನೇ ತಾರೀಖಿನ ಒಳಗೆ ವೇತನ ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಆದೇಶಿಸಿದ್ದಾರೆ.

ಬೆಂಗಳೂರು : ರಾಜ್ಯದ ಎಲ್ಲಾ ಶಿಕ್ಷಕರಿಗೂ ಪ್ರತಿ ತಿಂಗಳು 1ರಿಂದ 10ನೇ ತಾರೀಖಿನ ಒಳಗೆ ವೇತನ ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಆದೇಶಿಸಿದ್ದಾರೆ. 
ರಾಜ್ಯದ ಹಲವೆಡೆ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೆ ಕಳೆದ ಮೂರ್ನಾಲ್ಕು ತಿಂಗಳಿಂದ ವೇತನ ಬಿಡುಗಡೆಯಾಗದಿರುವ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್‌ ಸಭಾಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

ಜತೆಗೆ ಸಭೆಯಲ್ಲಿ ಉಪಸ್ಥಿತರಿದ್ದ ಶಿಕ್ಷಣ ಸಚಿವರು ಸಹ ಅಧಿಕಾರಿಗಳ ಈ ಕಾರ್ಯ ವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತು ಎಲ್ಲಾ ಶಿಕ್ಷರಿಗೂ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದರು. 

ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರುವ ಶಾಲಿನಿ ರಜನೀಶ್‌, ಪ್ರತಿ ತಿಂಗಳು 1ರಿಂದ 10ನೇ ತಾರೀಖಿನ ಒಳಗೆ ಎಲ್ಲಾ ಶಿಕ್ಷಕರಿಗೂ ವೇತನ ಬಿಡುಗಡೆಗೆ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.